
ಯೆಮೆನ್‌ನ ಇರಾನ್ ಬೆಂಬಲಿತ ಹೌತಿ ದಂಗೆಕೋರರು ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದ್ದು, ನಿಂತಿದ್ದ ವಿಮಾನವೊಂದರಿಂದ ದಟ್ಟ ಹೊಗೆ ಏಳುತ್ತಿರುವುದು ಕಂಡುಬಂದಿದೆ.
ಈ ದಾಳಿಯ ಬೆನ್ನಲ್ಲೇ ರಿಯಾದ್ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದ್ದು, ದೆಹಲಿಯಿಂದ ರಿಯಾದ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಅರ್ಧದಲ್ಲೇ ವಾಪಸಾಗಿದೆ.
ರಿಯಾದ್ ಹಾಗೂ ನೈಋತ್ಯ ಭಾಗದ ಅಭಾ ವಿಮಾನ ನಿಲ್ದಾಣಗಳನ್ನು ಗುರಿಯಾಗಿಸಿಕೊಂಡು ಈ ವಾರ ನಡೆದ ದಾಳಿಗಳಲ್ಲಿ ಕನಿಷ್ಠ ಮೂವರು ನಾಗರಿಕರು ಮೃತಪಟ್ಟಿದ್ದಾರೆ ಎಂದು ಸೌದಿ ಸಚಿವಾಲಯ ಬುಧವಾರ ಪ್ರಕಟಿಸಿದೆ.